Bible Versions
Bible Books

Revelation 4 (ERVKN) Easy to Read Version - Kannadam

1 ನಂತರ ನಾನು ನೋಡಿದಾಗ ನನ್ನ ಎದುರಿನಲ್ಲಿ ಪರಲೋಕದ ಬಾಗಿಲು ತೆರೆದಿರುವುದನ್ನು ಕಂಡೆನು. ನನ್ನ ಜೊತೆಯಲ್ಲಿ ಮೊದಲು ಮಾತನಾಡಿದ್ದ ಧ್ವನಿಯೇ ಮತ್ತೆ ನನ್ನೊಂದಿಗೆ ಮಾತಾಡಿತು. ಧ್ವನಿಯು ತುತೂರಿಯ ಧ್ವನಿಯಂತಿತ್ತು. ಧ್ವನಿಯು, “ಇಲ್ಲಿಗೆ ಹತ್ತಿ ಬಾ. ಮುಂದೆ ಸಂಭವಿಸುವುದನ್ನು ನಾನು ನಿನಗೆ ತೋರಿಸುತ್ತೇನೆ” ಎಂದು ಹೇಳಿತು.
2 ಕೂಡಲೇ ನಾನು ಪವಿತ್ರಾತ್ಮನ ವಶನಾದೆನು. ಪರಲೋಕದಲ್ಲಿ ನನ್ನೆದುರಿಗೆ ಒಂದು ಸಿಂಹಾಸನವಿತ್ತು. ಯಾರೋ ಒಬ್ಬನು ಸಿಂಹಾಸನದ ಮೇಲೆ ಕುಳಿತಿದ್ದನು.
3 ಸಿಂಹಾಸನದ ಮೇಲೆ ಕುಳಿತಿದ್ದಾತನು ಅಮೂಲ್ಯವಾದ ಸೂರ್ಯಕಾಂತ, ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲೂ ಪಚ್ಚೆಬಣ್ಣದ ಕಾಮನಬಿಲ್ಲಿತ್ತು.
4 ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತುಕೊಂಡಿದ್ದರು. ಅವರು ಬಿಳಿ ವಸ್ತ್ರಗಳನ್ನು ಧರಿಸಿದ್ದರು. ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.
5 ಸಿಂಹಾಸನದಿಂದ ಸಿಡಿಲಿನ ಆರ್ಭಟವೂ ಗುಡುಗಿನ ಧ್ವನಿಯೂ ಬರುತ್ತಿತ್ತು. ಸಿಂಹಾಸನದ ಮುಂದೆ ಏಳು ದೀಪಗಳು ಬೆಳಗುತ್ತಿದ್ದವು. ದೀಪಗಳು ದೇವರ ಏಳು ಆತ್ಮಗಳಾಗಿದ್ದವು.
6 ಇದಲ್ಲದೆ ಸಿಂಹಾಸನದ ಮುಂದೆ ಗಾಜಿನ ಸಮುದ್ರದಂತೆ ಕಾಣುವ ವಸ್ತುವೊಂದಿತ್ತು. ಅದು ಸ್ಫಟಿಕದಂತೆ ಸ್ಪಚ್ಛವಾಗಿತ್ತು. ಸಿಂಹಾಸನದ ಮುಂದೆ ಮತ್ತು ಅದರ ಪ್ರತಿಯೊಂದು ಮಗ್ಗುಲಿನಲ್ಲೂ ನಾಲ್ಕು ಜೀವಿಗಳಿದ್ದವು. ಜೀವಿಗಳ ಹಿಂಭಾಗದಲ್ಲೆಲ್ಲಾ ಮತ್ತು ಮುಂಭಾಗದಲ್ಲೆಲ್ಲಾ ಕಣ್ಣುಗಳು ತುಂಬಿದ್ದವು.
7 ಮೊದಲನೆ ಜೀವಿಯು ಸಿಂಹದಂತಿತ್ತು. ಎರಡನೆಯದು ಹಸುವಿನಂತಿತ್ತು. ಮೂರನೆಯದರ ಮುಖ ಮಾನವನ ಮುಖದಂತಿತ್ತು. ನಾಲ್ಕನೆಯದು ಹಾರುವ ಗರುಡನಂತಿತ್ತು.
8 ನಾಲ್ಕು ಜೀವಿಗಳಲ್ಲಿ ಪ್ರತಿಯೊಂದಕ್ಕೂ ಆರು ರೆಕ್ಕೆಗಳಿದ್ದವು. ಜೀವಿಗಳ ಹೊರಭಾಗದಲ್ಲೆಲ್ಲಾ ಮತ್ತು ಒಳಭಾಗದಲ್ಲೆಲ್ಲಾ ಕಣ್ಣುಗಳಿದ್ದವು. ನಾಲ್ಕು ಜೀವಿಗಳು ಹಗಲಿರುಳು ಎಡಬಿಡದೆ ಹೀಗೆ ಹೇಳುತ್ತಿದ್ದವು: “ದೇವರಾದ ಪ್ರಭು, ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು; ಆತನು ಸರ್ವಶಕ್ತನು. ಆತನು ಭೂತಕಾಲದಲ್ಲಿ ಇದ್ದವನೂ ವರ್ತಮಾನಕಾಲದಲ್ಲಿ ಇರುವಾತನೂ ಮುಂದೆ ಬರುವಾತನೂ ಆಗಿದ್ದಾನೆ.”
9 ಜೀವಿಗಳು, ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಪ್ರಭಾವ, ಗೌರವ ಮತ್ತು ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದವು. ಯುಗಯುಗಾಂತರಗಳಲ್ಲಿಯೂ ಜೀವಿಸುವವನು ಆತನೇ.
10 ಇಪ್ಪತ್ತನಾಲ್ಕು ಮಂದಿ ಹಿರಿಯರು ತಮ್ಮ ಕಿರೀಟಗಳನ್ನು ತೆಗೆದು ಬದಿಗಿಟ್ಟು, ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಮೊಣಕಾಲೂರಿ ನಮಸ್ಕರಿಸಿ, ಯುಗಯುಗಾಂತರಗಳಲ್ಲಿಯೂ ಜೀವಿಸುವ ಆತನನ್ನು ಆರಾಧಿಸುತ್ತಾ ಇಂತೆಂದರು:
11 ”ನಮ್ಮ ಪ್ರಭುವೇ, ನಮ್ಮ ದೇವರೇ! ನೀನು ಪ್ರಭಾವ, ಗೌರವ, ಅಧಿಕಾರಗಳನ್ನು ಪಡೆಯಲು ಯೋಗ್ಯನಾಗಿರುವೆ. ಎಲ್ಲವನ್ನೂ ನಿರ್ಮಿಸಿದಾತನು ನೀನೇ. ನಿನ್ನ ಚಿತ್ತದಂತೆಯೇ ಎಲ್ಲವೂ ಇದ್ದವು; ಎಲ್ಲವೂ ಸೃಷ್ಟಿಗೊಂಡವು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×